ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗುವ ಸಾಧ್ಯತೆ ಇದೆ. ಹೀಗಾಗಿ ಸಿಎಂಗೆ ಆತಂಕ ಮನೆ ಮಾಡಿದೆ.
ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಲೋಕಾಯುಕ್ತ ಮೈಸೂರು ಎಸ್ಪಿ ಉದೇಶ್ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.
ಹೀಗಾಗಿ ಇಂದು ಎಫ್ ಐಆರ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಎಫ್ ಐಆರ್ ನಲ್ಲಿ ಸಿಎಂ ಸಿದ್ದರಾಮಯ್ಯ A1ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಎಫ್ ಐಆರ್ ದಾಖಲಿಸಲು ವಿಳಂಬವಾಗುತ್ತಿದೆ ಎಂದು ಆರೋಪಿಸಿದ ದೂರುದಾರ ಸ್ನೇಹಮಯಿ ಕೃಷ್ಣ, ಎಸ್ಪಿ ವಿರುದ್ಧ ದೂರು ನೀಡಿದ್ದಾರೆ.
ಸಿಎಂ ಬೆನ್ನಿಗೆ ಕಾಂಗ್ರೆಸ್ ಹೈಕಮಾಂಡ್ ನಿಂತಿದ್ದು, ಯಾವುದೇ ಕಾರಣಕ್ಕೆ ರಾಜೀನಾಮೆ ನೀಡುವಂತಿಲ್ಲ ಎಂದು ಹೇಳಿದೆ ಎನ್ನಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ.