ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಭಾರತ ತಂಡ ಗೆಲ್ಲುತ್ತಿದ್ದಂತೆ ರಾಹುಲ್ ದ್ರಾವಿಡ್ ಅವರ ಕೋಚ್ ಅವಧಿ ಮುಕ್ತಾಯವಾಗಿತ್ತು. ದ್ರಾವಿಡ್ ಕೋಚ್ ಹುದ್ದೆಯಿಂದ ಕೆಳಗಿಳಿಯುವ ಕೊನೆಯ ಪಂದ್ಯದಲ್ಲಿಯೇ ಟ್ರೋಫಿಗೆ ಮುತ್ತಿಕ್ಕಿದ್ದರು. ಈಗ ಭಾರತದ ಕೋಚ್ ಆಗಿ ಗೌತಮ್ ಗಂಭೀರ್ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಆದರೆ, ಮಾಜಿ ಕೋಚ್ ರಾಹುಲ್ ದ್ರಾವಿಡ್ ಮತ್ತೊಂದು ತಂಡದ ಜವಾಬ್ದಾರಿ ಹೊರಲು ಸಿದ್ಧರಾಗಿದ್ದಾರೆ ಎನ್ನಲಾಗುತ್ತಿದೆ.
ರಾಹುಲ್ ದ್ರಾವಿಡ್ 17 ವರ್ಷಗಳ ನಂತರ ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್ ಚಾಂಪಿಯನ್ ಆಗಿಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೆ 11 ವರ್ಷಗಳ ನಂತರ ಐಸಿಸಿ ಟ್ರೋಫಿ ಬರವನ್ನು ಸಹ ಕೊನೆಗಾಣಿಸಿದ್ದರು. ಅಲ್ಲದೇ, ಒಪ್ಪಂದದಂತೆ ಟಿ20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಕ್ತಾಯಗೊಂಡಿತ್ತು. ಈ ಹುದ್ದೆಯಲ್ಲಿ ಮುಂದುವರೆಯುವಂತೆ ದ್ರಾವಿಡ್ ರನ್ನು ಬಿಸಿಸಿಐ ಕೇಳಿಕೊಂಡಿತ್ತಾದರೂ, ರಾಹುಲ್ ಮನಸ್ಸು ಮಾಡಿರಲಿಲ್ಲ. ಹೀಗಾಗಿ ಅವರ ಸ್ಥಾನಕ್ಕೆ ಗೌತಮ್ ಗಂಭೀರ್ ಆಗಮಿಸಿದ್ದಾರೆ.
ದ್ರಾವಿಡ್, ಐಪಿಎಲ್ ನ ರಾಜಸ್ಥಾನ ತಂಡದ ಮುಖ್ಯ ಕೋಚ್ ಆಗಬಹುದು ಎಂಬ ಮಾತು ಕೇಳಿ ಬರುತ್ತಿದೆ. ಈ ಮಧ್ಯೆ ದ್ರಾವಿಡ್ ಗೆ ಇಂಗ್ಲೆಂಡ್ ತಂಡದ ಮುಖ್ಯ ಕೋಚ್ ಹುದ್ದೆಯ ಆಫರ್ ಕೂಡ ಬಂದಿದೆ ಎನ್ನಲಾಗುತ್ತಿದೆ. ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ತಂಡ ಸೆಮಿಫೈನಲ್ ಸುತ್ತಿನಲ್ಲಿ ಸೋತು ಹೊರಬಿದ್ದ ನಂತರ ಮುಖ್ಯ ಕೋಚ್ ಮ್ಯಾಥ್ಯೂ ಮೋಟ್ ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಸ್ಥಾನದಲ್ಲಿ ಮಾರ್ಕಸ್ ಟ್ರೆಸ್ಕೋಥಿಕ್ ಹಂಗಾಮಿ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಲವಾರು ವರ್ಷಗಳಿಂದಲೂ ಇಂಗ್ಲೆಂಡ್ ತಂಡ ಪ್ರಶಸ್ತಿ ಗೆಲ್ಲಲು ವಿಫಲವಾಗಿದೆ. ಹೀಗಾಗಿ ತೆರವಾದ ಸ್ಥಾನಕ್ಕೆ ಅನೇಕ ಅನುಭವಿಗಳ ಹೆಸರುಗಳು ಕೇಳಿ ಬರುತ್ತಿವೆ. ಇದೀಗ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್, ರಾಹುಲ್ ದ್ರಾವಿಡ್ ಹೆಸರನ್ನು ಸೂಚಿಸುವ ಮೂಲಕ ಚರ್ಚೆ ಹುಟ್ಟುಹಾಕಿದ್ದಾರೆ. ಆದರೆ, ದ್ರಾವಿಡ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಕಾಯ್ದು ನೋಡಬೇಕಿದೆ.