ಬೆಂಗಳೂರು: ಮುಡಾ ಹಗರಣದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಈಗಾಗಲೇ ಹೈಕೋರ್ಟ್ ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ, ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶಿಸಿದೆ. ಹೀಗಾಗಿ ಸಿಎಂ ಕಾನೂನು ಹೋರಾಟ ಮುಂದುವರೆಸಲು ಮುಂದಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ. 26ರಂದು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಂಗಳವಾರ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿಯನ್ನು ಎತ್ತಿಹಿಡಿದಿದ್ದನ್ನು ಪ್ರಶ್ನಿಸಿ ಬುಧವಾರವೇ ಮೇಲ್ಮನವಿ ಸಲ್ಲಿಸಬೇಕಾಗಿತ್ತು. ಆದರೆ, ಅತ್ತ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನಡೆ ಆಧರಿಸಿ ಎರಡೂ ವಿಷಯಗಳನ್ನು ಮುಂದಿಟ್ಟುಕೊಂಡು ಮೇಲ್ಮನವಿ ಸಲ್ಲಿಸಲು ಮುಂದಾಗಿರಬಹುದು ಎನ್ನಲಾಗುತ್ತಿದೆ.
ಸದ್ಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪು, ಆನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಎರಡೂ ಅಂಶಗಳನ್ನು ಸೇರಿಸಿ ಗುರುವಾರ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮೂಲಗಳು ಹೇಳಿವೆ.
ಅದನ್ನು ವಿಭಾಗೀಯಪೀಠದ ಮುಂದೆ ಪ್ರಸ್ತಾಪಿಸಿ ಮುಂದಿನ ಎಲ್ಲಾ ಪ್ರಕ್ರಿಯೆಗೆ ಮಧ್ಯಂತರ ತಡೆ ಕೋರಲಾಗುವುದು ಎನ್ನಲಾಗುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ಯಾವ ನಿರ್ಧಾರ ಕೈಗೊಳ್ಳುತ್ತಾರೋ ಕಾಯ್ದು ನೋಡಬೇಕಿದೆ. ಈಗಾಗಲೇ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿರುವ ಅವರು ಕಾನೂನು ಹೋರಾಟ ನಡೆಸಿರುವುದಂತೂ ಸತ್ಯ.