ಬೀದರ್ : ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮದಲ್ಲಿ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಗಾಳಿಗೆ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ ತುಳಸಮ್ಮ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ತುಳಸಮ್ಮ ಅವರು ಕಬ್ಬಿನ ಗದ್ದೆಯಲ್ಲಿ ದಿನನಿತ್ಯದ ಕೆಲಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಜಮೀನಿನೊಳಗೆ ಬಿದ್ದಿದ್ದ ವಿದ್ಯುತ್ ತಂತಿ ಇರುವುದನ್ನು ಗಮನಿಸದೇ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಬ್ರಿಮ್ಸ್ ಆಸ್ಪತ್ರೆ ಎದುರು ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಕ್ರೋಶ ಹೊರಹಾಕಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ : ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್!



















