ದಾವಣಗೆರೆ : ಜಿಲ್ಲೆಯಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಮಧ್ಯವಯಸ್ಕ ಮಹಿಳೆಯೊಬ್ಬರ ಮೇಲೆ ಹತ್ತು ಮಂದಿ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತರನ್ನು ಇಸ್ತ್ರೀ ನಾಗರಾಜ್, ನಾಗರಾಜ್, ಅರ್ಜುನಾ, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ ಹಾಗೂ ಮಧು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಯಲೋದಹಳ್ಳಿ ಗ್ರಾಮದ ಯುವಕರು ಎಂದು ತಿಳಿದುಬಂದಿದೆ. ಘಟನೆ ಬಳಿಕ ಆರೋಪಿಗಳು ಕೃತ್ಯದ ವಿಡಿಯೋ ಹಾಗೂ ಫೋಟೋಗಳನ್ನು ಕೂಡ ಚಿತ್ರೀಕರಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಾಹಿತಿಯ ಪ್ರಕಾರ, ಜೂನ್ 3ರಂದು ಯಲೋದಹಳ್ಳಿ ಗ್ರಾಮದ ಹೊರವಲಯದಲ್ಲಿರುವ ತೋಟವೊಂದರಲ್ಲಿ ಈ ಕೃತ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಂದಿ ಬೇಟೆಗೆ ತೆರಳಿದ್ದ ಯುವಕರ ಗುಂಪು, ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ತಡೆದು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಅತ್ಯಾಚಾರದ ವಿಡಿಯೋ ಮತ್ತು ಫೋಟೋಗಳ ಬಗ್ಗೆ ಗ್ರಾಮದಾದ್ಯಂತ ಗುಸು ಗುಸು ಚರ್ಚೆ ಆರಂಭವಾಗುತ್ತಿದ್ದಂತೆ ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಅವುಗಳನ್ನು ಡಿಲಿಟ್ ಮಾಡಿದ್ದಾರೆ. ಪ್ರಕರಣದ ಗಂಭೀರತೆ ಹೆಚ್ಚಾಗುತ್ತಿದ್ದಂತೆ ಸಂತ್ರಸ್ತೆ ಬಸವಾಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತಕ್ಷಣ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತೆಯ ಹೇಳಿಕೆ, ವೈದ್ಯಕೀಯ ವರದಿ ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಪ್ರಕರಣದ ಎಲ್ಲಾ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!


















