ಬೆಂಗಳೂರು: ಮಹಿಳೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೇವಣ್ಣಗೆ ಜಾಮೀನು ಷರತ್ತು ಸಡಿಲಿಕೆ ಮಾಡಲಾಗಿದೆ.
ಮೈಸೂರು ಜಿಲ್ಲೆಯ ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ಸಡಿಲಿಕೆ ಕೋರಿದ್ದ ರೇವಣ್ಣ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾನ್ಯ ಮಾಡಿದೆ. ಅಲ್ಲದೇ, ಹೊರ ರಾಜ್ಯಗಳಿಗೆ ಸಂಚರಿಸಲು ಅನುಮತಿ ಕೂಡ ನೀಡಲಾಗಿದೆ.
ಆದರೆ, ದೇಶ ಬಿಟ್ಟು ಹೋಗದಂತೆ ಸೂಚಿಸಲಾಗಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಎಂದು ಬಿಡುಗಡೆಯಾಗಿದ್ದ ಅಶ್ಲೀಲ ವಿಡಿಯೋದಲ್ಲಿ ‘ನನ್ನ ತಾಯಿಯ ಚಿತ್ರವೂ ಇದ್ದು, ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಪತ್ನಿ ಭವಾನಿ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಎಸ್ ಐಟಿ ವಶಕ್ಕೆ ಪಡೆದಿತ್ತು. ಈ ಪ್ರಕರಣದ ಮೊದಲ ಆರೋಪಿ ರೇವಣ್ಣ ಆಗಿದ್ದಾರೆ.
ಮಹಿಳೆಯ ಪತ್ತೆಗಾಗಿ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಆದರೆ, ಸಂತ್ರಸ್ತ ಮಹಿಳೆ ಹೆಚ್.ಡಿ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಈ ಪ್ರಕರಣದಲ್ಲಿ ಈಗ ಹೆಚ್.ಡಿ ರೇವಣ್ಣ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು.