ಧಾರವಾಡ : ಸಹೋದರ ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಆಗಿರುವ ಬಗ್ಗೆ ಸಹೋದರಿ ಅಕ್ಕಮಹಾದೇವಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ತಮ್ಮನನ್ನು ನೆನೆದು ಕಣ್ಣೀರು ಹಾಕಿರುವ ಅವರು, ನಮಗೆ ಬಹಳ ಅನ್ಯಾಯ ಮಾಡಿದ್ದಾರೆ. ನಮಗೆ ಕಾನೂನಿನ ಮೇಲೆ ಭರವಸೆ ಇತ್ತು. 16 ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡಿದ ಸಿಬಿಐ ಅಧಿಕಾರಿಗಳು, ವಕೀಲರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ತಿಳಿಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕೋರ್ಟ್ ತೀರ್ಪಿನಿಂದ ನಮಗೆ ಖುಷಿಯಾಗಿದೆ, ಪ್ರಕರಣದಲ್ಲಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಆತನಿಗೂ ಜೀವಾವಧಿ ಶಿಕ್ಷೆಯಾಗಬೇಕಿತ್ತು ಎಂದು ಹೇಳಿದ್ದಾರೆ.
ಯೋಗೇಶ್ ಗೌಡ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ ಅಪರಾಧಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಕೇಸ್‌ನ 19ನೇ ಅಪರಾಧಿಯಾಗಿರುವ ಇನ್ಸ್‌ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಎಂಬುವವರಿಗೆ 7 ವರ್ಷಗಳ ಜೈಲು ಶಿಕ್ಷೆಯನ್ನು ನೀಡಲಾಗಿದೆ.
ಇನ್ನು ಯೋಗೇಶ್ ಗೌಡ ಅವರ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿಗಳನ್ನು ನೀಡುವಂತೆ ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ. ತಂದೆಯನ್ನು ಕಳೆದುಕೊಂಡ ಮಕ್ಕಳ ಭವಿಷ್ಯ ಮತ್ತು ವಿದ್ಯಾಭ್ಯಾಸದ ದೃಷ್ಟಿಯಿಂದ ಈ ಪರಿಹಾರದ ಮೊತ್ತವನ್ನು ಅಪರಾಧಿಗಳ ಕಡೆಯಿಂದ ಪಾವತಿಸಲು ಆದೇಶಿಸಲಾಗಿದೆ.
ಇದನ್ನೂ ಓದಿ : ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!



















